-->

Ugadi , Gudi Padyami - the start of new times

ಯುಗಾದಿ ಅಥವಾ ಉಗಾದಿ..! 

ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. "ಯುಗಾದಿ" ಪದದ ಉತ್ಪತ್ತಿ "ಯುಗ+ಆದಿ" - ಹೊಸ ಯುಗದ ಆರಂಭ ಎಂದು.

ಈ ಹಬ್ಬವನ್ನು ಹೆಚ್ಚಾಗಿ ಕರ್ನಾಟಕ ,ಆಂಧ್ರ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಾಡ್ ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಾಡ್ವ - ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ 'ಗುಡಿ' ಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ.
ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು. ಅಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುವುದು.
ತಳಿರು ತೋರಣವನ್ನು (ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು.
ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು. ಮುಂಜಾನೆ ಬೇಗನೆದ್ದು ಅಭ್ಯಂಜನ (ಎಣ್ಣೆ ಸೀಗೇಕಾಯಿಯಿಂದ ತಲೆಯನ್ನು ತೊಳೆದುಕೊಳ್ಳುವುದು) ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ಪಂಚಾಂಗವನ್ನು ಮನೆಯ ಹಿರಿಯರು ಓದುವರು ಮತ್ತೆಲ್ಲರೂ ಅದನ್ನು ಕೇಳುವರು.
ಪಂಚಾಂಗ ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು, ಒಟ್ಟರೆ ಜನಜೀವನದ ಸ್ಥಿತಿಯನ್ನು ಸೂಚಿಸಿರುವುದು. ಅಂದು ಹಿರಿಯ ಕಿರಿಯರೆಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಸಂತೋಷದಿಂದ ಹಾಡಿ ನಲಿವರು.

Ugadi , Gudi Padyami - the start of new times

ಖಣಿ ಇಡುವುದು : ಕರಾವಳಿಯ ಸೌರಮಾನ ಯುಗಾದಿಯ ವಿಶೇಷತೆ ಖಣಿ ಇಡುವುದು. ಬಾಳೆ ಎಲೆ, ತಟ್ಟೆಯಲಿ ಅಕ್ಕಿ ಹಾಕಿ ಅದರ ಮೇಲೆ ತೆಂಗಿನಕಾಯಿ, ಸೌತೇಕಾಯಿ, ರವಿಕೆ ಕಣ, ಹೊಸ ಬಟ್ಟೆ, ಚಿನ್ನ, ಬತ್ತದ ತೆನೆ, ಹಣ್ಣು, ದೇವರ ಪ್ರತಿಮೆ ಅದರ ಮುಂದೆ ಒಂದು ಕನ್ನಡಿ ಇಟ್ಟು, ಆ ಕನ್ನಡಿಯಲಿ ದೇವರ ಪ್ರತಿಮೆ ಹಾಗೂ ತಟ್ಟೆಯಲಿ ಇಟ್ಟಂತಹ ವಸ್ತುಗಳನ್ನು ಕಾಣುವ ಹಾಗೆ ಇಡುತ್ತಾರೆ. ವನ್ನು ಇಟ್ಟು ದೇವರ ಮುಂದೆ ಹಿಂದಿನ ರಾತ್ರಿ ಮಲಗುವ ಮುನ್ನ ಇಡುತ್ತಾರೆ. ಯುಗಾದಿ ಹಬ್ಬದಂದು ಬೆಳಿಗ್ಗೆ ಬೇಗ ಎದ್ದು ದೇವರ ದೀಪ ಹಚ್ಚಿ ಖಣಿಯಲ್ಲಿನ ಕನ್ನಡಿಯಲಿ ದೇವ ದರ್ಶನ ಪಡೆಯುವುದು ಅಂದಿನ ವಿಶೇಷ. ನಂತರ ಸ್ನಾನ, ಹೋಳಿಗೆ ಚಿತ್ರಾನ್ನದೂಟ, ದೇಗುಲಕ್ಕೆ ಹಾಗೂ ಹಿರಿಯರ ಭೇಟಿ,

Ugadi Obbattu Holige


ಒಬ್ಬಟ್ಟು ಅಥವಾ ಹೋಳಿಗೆ. ತೆಂಗಿನಕಾಯಿ ಹೂರಣದಲ್ಲಿ ಮಾಡಿದ ಹೋಳಿಗೆ ಬಹಳ ದಿನ ಇರದೇ ಕೆಡುವುದೆಂದು ಕಡಲೆ ಅಥವಾ ತೊಗರೀ ಬೇಳೆಯ ಹೂರಣದಲ್ಲಿ ಮಾಡುವರು. *ಇದನ್ನೇ ಮರಾಠಿಯಲ್ಲಿ ಪೂರಣ ಪೋಳಿ ಎಂದು ಕರೆವರು. ಸಂಜೆಯ ವೇಳೆಯಲ್ಲಿ ಗುರು ಹಿರಿಯರ ಮನೆಗಳಿಗೆ ಹೋಗಿ ಅವರಿಗೆ ಕಾಲುಮುಟ್ಟಿ ನಮಸ್ಕರಿಸಿ ಅವರ ಆಶೀರ್ವಾದ ಪಡೆವರು.
ಮನೆಯ ಹೆಂಗಸರು ಹೊಸದಾಗಿ ಬರುವ ಮಾವಿನಕಾಯಿಯಿಂದ ಉಪ್ಪಿನಕಾಯಿಯನ್ನು ಮಾಡುವರು.

ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ. ಬೇವು - ಬೆಲ್ಲದ ಮಿಶ್ರಣವನ್ನು ತಿನ್ನುವಾಗ ಹೇಳುವ ಒಂದು ಶ್ಲೋಕ ಹೀಗಿದೆ:

ಶತಾಯು: ವಜ್ರದೇಹಾಯ ಸರ್ವಸಂಪತ್ಕರಾಯಚ|
ಸರ್ವಾರಿಷ್ಟ ವಿನಾಶಾಯ ನಿಂಬಕಂದಳ ಭಕ್ಷಣಂ|| - 

ಅದರರ್ಥ ಹೀಗಿದೆ - ನೂರು ವರುಷಗಳ ಆಯುಷ್ಯ, ಸದೃಢ ಆರೋಗ್ಯ, ಸಕಲ ಸಂಪತ್ತುಗಳ ಪ್ರಾಪ್ತಿಗಾಗಿಯೂ, ಸಕಲ ಅರಿಷ್ಟ ನಿವಾರಣೆಗಾಗಿಯೂ ಬೇವು ಬೆಲ್ಲ ಸೇವನೆ ಮಾಡುತ್ತಾರೆ


Terms | Privacy | 2024 🇮🇳
–>